ರಂಭಾಪುರಿ ಪೀಠ (ಬಾಳೆಹೊನ್ನೂರು) : ಸ್ವಾತಂತ್ರ್ಯ ಎಂದರೇ ಸ್ವೇಚ್ಛಾಚಾರವಲ್ಲ. ಅದು ದೇಶದ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂದು ಅರಿತು ಸಂವಿಧಾನಬದ್ಧವಾಗಿ ನಡೆದುಕೊಳ್ಳುವ ಉತ್ತಮ ಕ್ರಮವನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಶ್ರೀ ರಂಭಾಪುರಿ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಅಭಿಪ್ರಾಯಪಟ್ಟರು.
ರಂಭಾಪುರಿ ಪೀಠದ ಶ್ರೀ ಜಗದ್ಗುರು ರೇಣುಕಾಚಾರ್ಯ ಶಿಕ್ಷಣ ಪ್ರತಿಷ್ಠಾನದ ಜಗದ್ಗುರು ರುದ್ರಮುನೀಶ್ವರ ವಸತಿ ಪ್ರೌಢಶಾಲೆ ಹಾಗೂ ವೀರಭದ್ರೇಶ್ವರ ಪ್ರಾಥಮಿಕ ಶಾಲಾ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಮೃತ ಮಹೋತ್ಸವ ಸ್ವಾತಂತ್ರö್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಆಶೀರ್ವಚನ ನೀಡಿದರು.
ಭಾರತ ದೇಶದಲ್ಲಿ ವಿವಿಧ ಜಾತಿ, ಮತ, ಪಂಥಗಳಿದ್ದರೂ ಕೂಡ ನಾವೆಲ್ಲರೂ ಭಾರತ ಮಾತೆಯ ಮಕ್ಕಳು ಎನ್ನುವ ಮನೋಭಾವನೆಯನ್ನು ಹೊಂದಿ ಭಾರತ ದೇಶವನ್ನು ಸದೃಢ ರಾಷ್ಟ್ರವನ್ನಾಗಿ ಮತ್ತು ಎಲ್ಲರೂ ಪ್ರೀತಿ, ಪ್ರೇಮ, ವಿಶ್ವಾಸ, ಸೌಹಾರ್ಧತೆಯಿಂದ ಬದುಕುವ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳಬೇಕಾಗಿರುವುದು ಅಗತ್ಯವಾಗಿದೆ. ಯುವ ಸಮೂಹದಲ್ಲಿ ದೇಶ ಪ್ರೇಮ ರಾಷ್ಟ್ರ ಭಕ್ತಿ ಬೆಳೆದು ಬರಬೇಕು.
ಸ್ವಾ ಸ್ವಾತಂತ್ರ್ಯ ದೊರೆತು 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಇಡೀ ರಾಷ್ಟಾçದ್ಯಂತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹೆಸರಿನಿಂದ ಆಚರಿಸುತ್ತಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ. ಸ್ವಾತಂತ್ರ್ಯದ ಹೋರಾಟದಲ್ಲಿ ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಬಾಯ್ ಪಟೇಲ್, ಜವಾಹರ್‌ಲಾಲ್ ನೆಹರು, ದಾದಾಬಾಯ್ ನೌರೋಜಿ, ಬಾಲಗಂಗಾಧರ ತಿಲಕ್, ಸುಬಾಷ್‌ಚಂದ್ರ ಬೋಸ್ ಸೇರಿದಂತೆ ಹಲವು ಮಹನೀಯರ ಹೋರಾಟದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ಪ್ರಾಪ್ತವಾಯಿತು. ಸ್ವಾತಂತ್ರ್ಯದ ಸಂಗ್ರಾಮದಲ್ಲಿ ಹುತಾತ್ಮರಾದವರು ಹಲವರಿದ್ದಾರೆ. ಹುತಾತ್ಮರಾದ ದೇಶಭಕ್ತರಿಗೆ ಈ ದೇಶ ಕೃತಜ್ಞತೆಯನ್ನು ಸಲ್ಲಿಸಬೇಕಿದೆ ಎಂದರು.
ಈ ಬಾರಿ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಶಾಲಾ ವಿದ್ಯಾರ್ಥಿಗಳು ಇಲ್ಲದೇ ಕೇವಲ ಶಿಕ್ಷಕರು, ಜನಪ್ರತಿನಿಧಿಗಳು, ಗಣ್ಯರ ಸಮ್ಮುಖದಲ್ಲಿ ಧ್ವಜಾರೋಹಣ ನೆರವೇರಿಸುವಂತಾಗಿರುವುದು ನೋವಿನ ಸಂಗತಿಯಾಗಿದೆ. ಕೊರೋನಾ ಸೋಂಕು ಶೀಘ್ರ ದೂರವಾಗಿ ಎಂದಿನ0ತೆ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡು ಜೀವನದಲ್ಲಿ ಯಶಸ್ಸು, ಶ್ರೇಯಸ್ಸನ್ನು ಸಂಪಾದಿಸಿಕೊಳ್ಳಲಿ ಎಂದು ಹಾರೈಸುತ್ತೇವೆ ಎಂದರು.
ಸೂಡಿ ಜುಕ್ತಿ ಹಿರೇಮಠದ ಕೊಟ್ಟೂರು ಬಸವೇಶ್ವರ ಶಿವಾಚಾರ್ಯರು, ಬಬಲಾದ ಹಿರೇಮಠದ ದಾನಯ್ಯ, ಬಿ.ಕಣಬೂರು ಗ್ರಾಪಂ ಉಪಾಧ್ಯಕ್ಷ ಎಂ.ಜೆ.ಮಹೇಶ್ ಆಚಾರ್ಯ, ಸದಸ್ಯರಾದ ಬಿ.ಜಗದೀಶ್ಚಂದ್ರ, ಕೋಕಿಲಮ್ಮ, ಮುಖ್ಯಶಿಕ್ಷಕ ಸದಾನಂದ, ಶಿಕ್ಷಕರಾದ ಕಟ್ಟೇಗೌಡ, ವೀರೇಶ್ ಕುಲಕರ್ಣಿ ಮತ್ತಿತರರು ಹಾಜರಿದ್ದರು.
ವರದಿ: ಸಿ.ಎಚ್. ಬಾಳನಗೌಡ್ರ
ವಾರ್ತಾ ಸಂಯೋಜನಾಧಿಕಾರಿ,
ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠ,