ರಾಯಚೂರು: ತುಂಗಭದ್ರಾ ನದಿ ತೀರದಲ್ಲಿ ನ.20ರಿಂದ ಡಿ.1ರವರೆಗೆ ನಡೆಯಲಿರುವ ತುಂಗಭದ್ರಾ ಪುಷ್ಕರಕ್ಕೆ ಆಗಮಿಸುವ ಭಕ್ತರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದರು ತಿಳಿಸಿದರು.
ಮಂತ್ರಾಲಯದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತುಂಗಭದ್ರಾ ನದಿಗೆ 12 ವರ್ಷಗಳಿಗೊಮ್ಮೆ ಬರುವ ಪುಷ್ಕರ ಆಚರಣೆಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಆಂಧ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳಿಗೆ ಪುಷ್ಕರದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಲಾಗಿದೆ. ಮಂತ್ರಾಲಯದ ತುಂಗಭದ್ರಾ ನದಿ ತೀರದಲ್ಲಿ ಐದು ಕಡೆ ಸ್ನಾನಘಟ್ಟಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಕೊರೋನಾ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸೋಂಕು ಹರಡದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ನ.20ರ ಬೆಳಗ್ಗೆ 6 ಗಂಟೆಗೆ ಶ್ರೀಮಠದಿಂದ ಉತ್ಸವರಾಯರ ಮೂರ್ತಿಯೊಂದಿಗೆ ತೆರಳಿ ಪೂಜೆ ಸಲ್ಲಿಸಲಾಗುತ್ತದೆ. ನಂತರ ನದಿಯಲ್ಲಿ ಪುಣ್ಯಸ್ನಾನಕ್ಕೆ ಭಕ್ತರಿಗೆ ಅವಕಾಶ ನೀಡಲಾಗುವುದು. ನದಿ ತೀರಕ್ಕೆ ಆಗಮಿಸುವವರಿಗೆ ಕೋವಿಡ್ ಮಾರ್ಗಸೂಚಿ ಅನುಸರಿಸುವಂತೆ ಸೂಚನೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.