ಶ್ರೀ ಜಗದ್ಗುರು ರೇಣುಕಾಚಾರ್ಯರ ವಿಚಾರ ಧಾರೆ ಸರ್ವಕಾಲಕ್ಕೂ ಅನ್ವಯ: ಶ್ರೀ ರಂಭಾಪುರಿ ಜಗದ್ಗುರುಗಳು

ರಾಣೆಬೆನ್ನೂರು: ವಿಶ್ವ ಬಂಧುತ್ವದ ಆದರ್ಶ ಮಾನವೀಯ ಮೌಲ್ಯಗಳನ್ನು ಬೋಧಿಸಿದ ಶ್ರೀ ಜಗದ್ಗುರು ರೇಣುಕಾಚಾರ್ಯರ ವಿಚಾರ ಧಾರೆಗಳು ಸರ್ವಕಾಲಕ್ಕೂ ಸರ್ವರಿಗೂ ಅನ್ವಯಿಸುತ್ತವೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.


ಅವರು ನಗರದಲ್ಲಿ ಜರುಗಿದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.


ಅಂತರಂಗ ಬಹಿರಂಗ ಶುದ್ಧಿಗೆ ಪ್ರಾಧಾನ್ಯತೆ ಕೊಟ್ಟ ಶ್ರೀ ಜಗದ್ಗುರು ರೇಣುಕಾಚಾರ್ಯರು ಧರ್ಮದ ದಶ ಸೂತ್ರಗಳನ್ನು ಬೋಧಿಸಿ ಸಕಲರನ್ನು ಉದ್ಧರಿಸಿದರು. ಮಹಾಜ್ಞಾನಿ ಅಗಸ್ತ್ಯ ಮಹರ್ಷಿಗಳಿಗೆ ಶಿವಾದ್ವೈತ ತತ್ತ್ವ ಸಿದ್ಧಾಂತವನ್ನು ಬೋಧಿಸಿ ಹರಸಿದರು. ಕಾಯಕ ಮತ್ತು ದಾಸೋಹದ ಮೂಲಕ ಸಕಲರಿಗೂ ಶ್ರೇಯಸ್ಸನ್ನು ಉಂಟು ಮಾಡಿದರು. ಮಹಿಳೆಯರಿಗೆ ಮತ್ತು ರೈತ ಸಮುದಾಯಕ್ಕೆ ಅವರು ಕೊಟ್ಟ ಕೊಡುಗೆ ಅಮೂಲ್ಯವಾದುದು.

ರಾಣೆಬೆನ್ನೂರು ನಗರದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಯುಗಮಾನೋತ್ಸವ ಹಮ್ಮಿಕೊಂಡಿರುವುದು ತಮಗೆ ಅತೀವ ಸಂತೋಷ ತಂದಿದೆ ಎಂದರು.


ಶಾಸಕ ಅರುಣಕುಮಾರ ಪೂಜಾರ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಣೆಬೆನ್ನೂರು ಹಿರೇಮಠದ ಶಿವಯೋಗಿ ಶಿವಾಚಾರ್ಯ ಸ್ವಾಮಿಗಳು ಪ್ರಾಸ್ತಾವಿಕವಾಗಿ ಮಾತನಾಡಿದರು. ಎಲ್ಲ ಶಿವಾಚಾರ್ಯರ ಪರವಾಗಿ ನೆಗಳೂರು ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮಿಗಳು ಉಪದೇಶಾಮೃತ ನೀಡಿದರು. ಹಲವಾರು ಮಠಾಧೀಶರು ಮತ್ತು ಗಣ್ಯರು ಪಾಲ್ಗೊಂಡಿದ್ದರು. ಪ್ರಭುಸ್ವಾಮಿ ಕರ್ಜಗಿಮಠ ಸ್ವಾಗತಿಸಿದರು. ಸವಣೂರಿನ ಡಾ. ಗುರುಪಾದಯ್ಯ ಸಾಲಿಮಠ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳವರ ಇಷ್ಟಲಿಂಗ ಮಹಾಪೂಜಾ ಜರುಗಿತು. ಸಮಾರಂಭದ ನಂತರ ಆಗಮಿಸಿದ ಸಕಲ ಸದ್ಭಕ್ತರಿಗೆ ಅನ್ನ ದಾಸೋಹ ಏರ್ಪಡಿಸಲಾಗಿತ್ತು.

ವರದಿ: ಸಿ.ಎಚ್. ಬಾಳನಗೌಡ್ರ
ವಾರ್ತಾ ಸಂಯೋಜನಾಧಿಕಾರಿ,
ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠ,
ಬಾಳೆಹೊನ್ನೂರು

Related Articles

ಪ್ರತಿಕ್ರಿಯೆ ನೀಡಿ

Latest Articles